ಸರ್ಕಾರಿ ಕಾರ್ಯಕ್ರಮಗಳ ಯಶಸ್ವಿಗೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ

ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸಮನ್ವಯದಿಂದ ಕೆಲಸ ಮಾಡಿದಾಗ ಸರ್ಕಾರಿ ಕಾರ್ಯಕ್ರಮಗಳ ಯಶಸ್ವಿ ಸಾಧ್ಯ: ಶುಭ ಕಲ್ಯಾಣ್

ತುಮಕೂರು: ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸಮನ್ವಯದಿಂದ ಕೆಲಸ ಮಾಡಿದಾಗ ಮಾತ್ರ ಸರ್ಕಾರಿ ಕಾರ್ಯಕ್ರಮಗಳು ಯಶಸ್ವಿಯಾಗಿ ಅನುಷ್ಟಾನ ಗೊಳ್ಳಲು ಸಾಧ್ಯ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಭಿಪ್ರಾಯಪಟ್ಟರು.

 

 

ತಾಲ್ಲೂಕಿನ ಕೋರ ಹೋಬಳಿ ಮುದ್ದೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದ ಜನಸ್ಪಂದನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು ಸರ್ಕಾರಿ ಆಡಳಿತವನ್ನು ಜನರ ಬಳಿ ತಂದು ಜನರ ಸಮಸ್ಯೆಗಳನ್ನು ಪರಿಹರಿಸುವುದೇ ಜನ ಸ್ಪಂದನ ಕಾರ್ಯಕ್ರಮದ ಉದ್ದೇಶವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರಲ್ಲದೆ, ಅಧಿಕಾರಿಗಳು ಸರ್ಕಾರಿ ಕೆಲಸವನ್ನು ತಮ್ಮ ಮನೆಯ ಕೆಲಸದಂತೆ ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ತಿಳಿಸಿದರು.

 

 

ತಾಲ್ಲೂಕಿನ ವಿವಿಧ ಭಾಗದ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತಲುಪಲು ಪರದಾಡುತ್ತಿರುವ ಬಗ್ಗೆ ಸಾರ್ವಜನಿಕರು ಸಲ್ಲಿಸಿದ ದೂರಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ಕೂಡಲೇ ಈ ಬಗ್ಗೆ ಪರಿಶೀಲನೆ ನಡೆಸಿ ತಾಲ್ಲೂಕಿನಲ್ಲಿ ಹೆಚ್ಚುವರಿ ಬಸ್ಸುಗಳ ಕಾರ್ಯಾಚರಣೆಗೆ ಕ್ರಮವಹಿಸಬೇಕು. ಅಲ್ಲದೆ ಸಿರಾ ಮತ್ತು ತುಮಕೂರು ಮಾರ್ಗವಾಗಿ ಸಂಚರಿಸುವ ಬಸ್ಸುಗಳು ಕೋರ ಗ್ರಾಮದಿಂದ ಹಾದು ಹೋಗುವಂತೆ ಕ್ರಮ ಕೈಗೊಂಡು ವಿದ್ಯಾರ್ಥಿಸ್ನೇಹಿ ಸಂಪರ್ಕ ವ್ಯವಸ್ಥೆ ಕಲ್ಪಿಸುವಂತೆ ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್ ಅವರಿಗೆ ಸೂಚನೆ ನೀಡಿದರು.

 

 

 

ವಸಂತನರಸಾಪುರ ಕೈಗಾರಿಕಾ ಪ್ರದೇಶದ ಕೆಲವು ಆಯಿಲ್ ಕಂಪನಿಗಳಿಂದ ಯಾವುದೇ ರೀತಿಯ ಸಂಸ್ಕರಣೆ ಮಾಡದ ಕೈಗಾರಿಕಾ ತ್ಯಾಜ್ಯವನ್ನು ನೇರವಾಗಿ ಗಾಳಿಯಲ್ಲಿ ಹೊರ ಬಿಡುತ್ತಿರುವುದರಿಂದ ಪರಿಸರ ಮಾಲಿನ್ಯ ಉಂಟಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಸಿಸುತ್ತಿರುವ ಜನರಿಗೆ ಬಹಳಷ್ಟು ಸಮಸ್ಯೆ ಎದುರಿಸುತ್ತಿರುವ ಬಗ್ಗೆ ತಿಳಿಸಿದ ರೈತ ಮುಖಂಡರೊಂದಿಗೆ ಚರ್ಚಿಸಿದ ಅವರು ಸ್ಥಳದಲ್ಲೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗೆ ಶೋಕಾಸ್ ನೋಟಿಸ್ ನೀಡಿ ಸಮಸ್ಯೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಿದರು.

 

 

ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಈಗಾಗಲೇ ಜನ ಸ್ಪಂದನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರಿಂದ ದನದ ಕೊಟ್ಟಿಗೆ, ಶೌಚಾಲಯ, ಸಾರ್ವಜನಿಕ ಸ್ಮಶಾನ, ಪವತಿ ಖಾತೆ, ದಾರಿ ಸಮಸ್ಯೆ, ಬಸ್ಸುಗಳ ಸಮಸ್ಯೆ ಬಗ್ಗೆ ಹೆಚ್ಚು ದೂರುಗಳು ಸಲ್ಲಿಕೆಯಾಗಿದ್ದು ಈ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

 

 

 

ವಿಧವಾ ವೇತನ, ಸಂಧ್ಯಾ ಸುರಕ್ಷಾ ವೇತನ, ವೃಧ್ಯಾಪ್ಯ ವೇತನ, ಆಯುಷ್ಮಾನ್ ಭಾರತ್ ಕಾರ್ಡ್, ಕಾರ್ಮಿಕ ಕಾರ್ಡ್, ರಾಗಿ ಬಿತ್ತನೆ ಬೀಜ ಸೇರಿದಂತೆ ವಿವಿಧ ಇಲಾಖೆಗಳ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಿದರು.
ನಂತರ ಮಾತನಾಡಿದ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್ ಜಿಲ್ಲೆಯ ರೈತರು ತಮ್ಮ ಬೆಳೆಗಳನ್ನು ಸ್ವತಃ ತಾವೇ ಮೊಬೈಲ್ ಮೂಲಕ ಬೆಳೆ ಸಮೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ಸಮೀಕ್ಷೆಗೆ ನೋಂದಣಿ ಮಾಡಿಕೊಳ್ಳಬೇಕು. ರೈತರಿಗೆ ಬಿತ್ತನೆ ಬೀಜ ಮತ್ತು ರಸ ಗೊಬ್ಬರಗಳನ್ನು ವಿತರಿಸಲಾಗುತ್ತಿದ್ದು ಅಗತ್ಯ ಬಿದ್ದ ಸಂದರ್ಭದಲ್ಲಿ ಕೋರ ಹೋಬಳಿ ವ್ಯಾಪ್ತಿಯಲ್ಲಿ ಮತ್ತೊಂದು ವಿತರಣಾ ಕೇಂದ್ರವನ್ನು ತೆರೆಯಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಕೋರ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಧು, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ತಹಶೀಲ್ದಾರ್ ಎಂ. ಸಿದ್ದೇಶ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೆ. ಹರ್ಷ ಕುಮಾರ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಭೂ ದಾಖಲೆಗಳ ಇಲಾಖೆ ಉಪನಿರ್ದೇಶಕ ನಿರಂಜನ್, ರೇಷ್ಮೆ ಇಲಾಖೆ ಉಪನಿರ್ದೇಶಕ ಬಾಲಕೃಷ್ಣಪ್ಪ, ಕೃಷಿ ಇಲಾಖೆ ಉಪನಿರ್ದೇಶಕ ಅಶೋಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ದಿನೇಶ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 

ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಅರ್ಜಿ ಸ್ವೀಕರಿಸಲು ಇಲಾಖಾವಾರು ಅರ್ಜಿ ಸ್ವೀಕಾರ ಕೇಂದ್ರಗಳನ್ನು ತೆರೆಯಲಾಗಿತ್ತು. ಅರ್ಜಿ ಸ್ವೀಕಾರ ಕೇಂದ್ರದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ 36 ಅರ್ಜಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ-16, ಬೆಸ್ಕಾಂ-1, ಕೃಷಿ ಇಲಾಖೆ-1, ಪಾಲಿಕೆ-2, ಗ್ರಾಮೀಣ ನೀರು ಸರಬರಾಜು-3, ರೈಲ್ವೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿಗಳು-2 ಸೇರಿ ಒಟ್ಟು 61 ಅಹವಾಲುಗಳು ಸ್ವೀಕೃತವಾಗಿವೆ.

Leave a Reply

Your email address will not be published. Required fields are marked *