ತುಮಕೂರು: ಜಿಲ್ಲಾಡಳಿತ ವತಿಯಿಂದ ನವೆಂಬರ್ ಮಾಹೆಯಲ್ಲಿ ಆಚರಿಸಲಾಗುತ್ತಿರುವ ಸಂತ ಶ್ರೇಷ್ಠ ವೀರರಾಣಿ ಒನಕೆ ಓಬವ್ವ ಜಯಂತಿ ಹಾಗೂ ಕನಕದಾಸರ ಜಯಂತಿಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ನವಂಬರ್ 11ರಂದು ವೀರರಾಣಿ ಒನಕೆ ಓಬವ್ವ ಜಯಂತಿ ಮತ್ತು ನವೆಂಬರ್ 18ರಂದು ಸಂತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಒನಕೆ ಓಬವ್ವ ಹಾಗೂ ಕನಕದಾಸರ ವಿಚಾರಧಾರೆ ಮತ್ತು ಅವರ ಜೀವನ ಕುರಿತು ತಿಳಿಸುವ ಮೂಲಕ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಯೋಜನೆ ಮಾಡಬೇಕು. ಜಯಂತಿ ಅಂಗವಾಗಿ ಸಮುದಾಯದ ತಲಾ 10 ಮಂದಿ ಸಾಧಕರನ್ನು ಗುರುತಿಸಿ ಸನ್ಮಾನಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ವೇದಿಕೆ ಕಾರ್ಯಕ್ರಮದ ಮುನ್ನ ನಗರದ ಶಿರಾ ಗೇಟ್, ದಿಬ್ಬೂರು ಸೇರಿದಂತೆ ವಿವಿಧ ಭಾಗಗಳಿಂದ ಮೆರವಣಿಗೆ ಆಗಮಿಸುವುದರಿಂದ ಮೆರವಣಿಗೆಗೆ ವಿವಿಧ ಕಲಾ ತಂಡಗಳನ್ನು ಕರೆತರುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ಅವರಿಗೆ ಸೂಚಿಸಿದರು.
ವೀರರಾಣಿ ಒನಕೆ ಓಬವ್ವ ಜಯಂತಿ ಅಂಗವಾಗಿ ನವೆಂಬರ್ 11ರಂದು ವಿವಿಧ ಕಲಾ ತಂಡಗಳೊಂದಿಗೆ ನಗರದ ಬಿ.ಜಿ.ಎಸ್. ವೃತ್ತದಿಂದ ವೀರರಾಣಿ ಒನಕೆ ಓಬವ್ವ ಅವರ ಭಾವಚಿತ್ರದ ಮೆರವಣಿಗೆ ನಡೆಸಲಾಗುತ್ತದೆ. ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ಸಮುದಾಯದ ತಲಾ 5 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಬೇಕೆಂದು ತಿಳಿಸಿದರು.
ಸಭೆಯಲ್ಲಿ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು