ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದಲ್ಲಿ ಯಾವುದೇ ಮಕ್ಕಳು ಹೊರಗುಳಿಯದಂತೆ ಸಮೀಕ್ಷೆಗೆ ಒಳಪಡಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಸೂಚನೆ.

ತುಮಕೂರು: ಜಿಲ್ಲೆಯಲ್ಲಿ ಕೈಗೊಂಡಿರುವ ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದಲ್ಲಿ ಯಾವುದೇ ಮಕ್ಕಳು ಹೊರಗುಳಿಯದಂತೆ ಸಮೀಕ್ಷೆಗೆ ಒಳಪಡಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಗಣತಿದಾರರಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಸಮೀಕ್ಷೆ ಕುರಿತು ಅಭಿಪ್ರಾಯ ಹಾಗೂ ಸಲಹೆ ಬಗ್ಗೆ ಚರ್ಚಿಸುವ ಸಲುವಾಗಿ ದಲಿತ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದುವರೆಗೆ ಪ್ರತಿ ದಿನ ಸರಾಸರಿ 8207 ಕುಟುಂಬಗಳ ಸಮೀಕ್ಷೆ ನಡೆಸಲಾಗಿದ್ದು, ಶೇಕಡಾ 103ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ ಎಂದು ತಿಳಿಸಿದರು.

 

ಸಮೀಕ್ಷೆಯಿಂದ ಹೊರಗುಳಿದಿರುವ ಕುಟುಂಬಗಳ ಸಮೀಕ್ಷೆಯನ್ನು ಮುಂದಿನ ಮೂರು ದಿನಗಳಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರಲ್ಲದೆ, ಸಮೀಕ್ಷೆಯ ಕೊನೆಯ ದಿನಾಂಕದ ಬಗ್ಗೆ ನಗರ ಸೇರಿದಂತೆ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಜನಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

 

 

ಸಭೆಯಲ್ಲಿದ್ದ ದಲಿತ ಮುಖಂಡರು ಮಾತನಾಡಿ ಪರಿಶಿಷ್ಟ ಜಾತಿಯೇತರ ಸಮುದಾಯದವರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸಮೀಕ್ಷೆಯಲ್ಲಿಯೂ ಗಣತಿದಾರರಿಗೆ ನೈಜ ಮಾಹಿತಿಯನ್ನು ಮರೆಮಾಚಿ ಸುಳ್ಳು ಮಾಹಿತಿ ನೀಡುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರಲ್ಲದೆ, ವಿವಿಧ ಸಮಸ್ಯೆಗಳ ಬಗ್ಗೆ ಸಭೆಯ ಗಮನಕ್ಕೆ ತಂದರು.
ನಂತರ ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ದಲಿತ ಮುಖಂಡರು ಸಭೆಗೆ ಸಲ್ಲಿಸಿರುವ ಮನವಿಗಳನ್ನು ಡಾ: ಎಚ್.ಎನ್. ನಾಗಮೋಹನದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ಗಮನಕ್ಕೆ ತರಲಾಗುವುದು. ಸ್ಥಳೀಯವಾಗಿ ಬಗೆಹರಿಯುವ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

 

ಸಮಾಜ ಕಲ್ಯಾಣ ಇಲಾಖೆ ಕೃಷ್ಣಪ್ಪ ಮಾತನಾಡಿ ರಾಜ್ಯದಲ್ಲಿ ಅತಿ ಹೆಚ್ಚು ಕುಟುಂಬಗಳ ಸಮೀಕ್ಷೆ ಮಾಡುವಲ್ಲಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಸಮೀಕ್ಷಾ ಕಾರ್ಯದಲ್ಲಿ 1,19,732 ಪರಿಶಿಷ್ಟ ಜಾತಿ ಕುಟುಂಬಗಳ ಗಣತಿ ಕೈಗೊಳ್ಳಲು ಆಯೋಗದಿಂದ ಗುರಿ ನೀಡಲಾಗಿದ್ದು, ಇಲ್ಲಿಯವರೆಗೆ 1,23,113 ಪರಿಶಿಷ್ಟ ಜಾತಿ ಕುಟಂಬಗಳ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ ಹಾಗೂ ಸಪ್ತಶ್ರೀ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ವೈ.ಹೆಚ್. ಹುಚ್ಚಯ್ಯ ಸೇರಿದಂತೆ ಮತ್ತಿತರ ಅಧಿಕಾರಿಗಳು, ದಲಿತ ಮುಖಂಡರು ಉಪಸ್ಥಿತರಿದ್ದರು.

ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ-2025ರ ಸಂಬಂಧ ಆನ್‍ಲೈನ್ ಮೂಲಕ ಸ್ವಯಂ ಘೋಷಣೆ ಕುರಿತು ಸಮಾಜ ಕಲ್ಯಾಣ ಇಲಾಖೆಯಿಂದ ಹೊರತಂದಿರುವ ಪೋಸ್ಟರ್ ಬಿಡುಗಡೆ ಮಾಡಲಾಯಿತು.

Leave a Reply

Your email address will not be published. Required fields are marked *

error: Content is protected !!