ತುರುವೇಕೆರೆ: ಸಾರ್ವಜನಿಕರ ಕುಂದುಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರದ ಆದೇಶದಂತೆ ಜೂನ್ 26 ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ತಾಲ್ಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಹಸೀಲ್ದಾರ್ ರೇಣುಕುಮಾರ್ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜೂನ್ ತಿಂಗಳ ಮೊದಲ ವಾರದಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಜಂಟಿಯಾಗಿ ತಾಲ್ಲೂಕು ಮಟ್ಟದಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ನಡೆಸಿ ಜುಲೈ 15 ರೊಳಗೆ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸ್ವೀಕೃತವಾದ ಮನವಿ, ಮನವಿಯ ಬಗ್ಗೆ ಕೈಗೊಂಡ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳ ಮುಖ್ಯ ಕಾರ್ಯದರ್ಶಿಗೆ ವರದಿ ಸಲ್ಲಿಸಬೇಕೆಂದು ಸರ್ಕಾರದ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ತುರುವೇಕೆರೆ ತಾಲ್ಲೂಕು ಮಟ್ಟದಲ್ಲಿ ಜೂನ್ 26 ರಂದು ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಜನಸ್ಪಂದನಾ ಕಾರ್ಯಕ್ರಮದಲ್ಲಿ ಶಾಸಕ ಎಂ.ಟಿ.ಕೃಷ್ಣಪ್ಪ, ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿ ವರ್ಗ ಪಾಲ್ಗೊಳ್ಳಲಿದ್ದು, ಸಾರ್ವಜನಿಕರು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮನವಿ ಸಲ್ಲಿಸಬಹುದಾಗಿದೆ. ಜಿಲ್ಲಾಧಿಕಾರಿಗಳು ಸ್ಪಷ್ಟ ಸೂಚನೆ ನೀಡಿದ್ದು, ಜನಸ್ಪಂದನಾ ಕಾರ್ಯಕ್ರಮದಲ್ಲಿ ಸ್ವೀಕೃತವಾದ ಅಹವಾಲುಗಳನ್ನು ಒಂದುವಾರದೊಳಗೆ ವಿಲೇವಾರಿ ಮಾಡಬೇಕೆಂದು ಆದೇಶಿಸಿದ್ದಾರೆ.
ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಪ್ರತಿ ಇಲಾಖೆಯ ಕೌಂಟರ್ ತೆರೆಯಲಿದ್ದು, ಇಲಾಖಾ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ನೀಡಲಾಗುವುದು. ಇದಲ್ಲದೆ ಆಯಾ ಇಲಾಖೆಗೆ ಸಂಬಂಧಿಸಿದ ಕುಂದುಕೊರತೆಗಳ ಬಗ್ಗೆ ಮನವಿ ಸ್ವೀಕರಿಸಿ, ಸ್ಥಳದಲ್ಲೇ ಬಗೆಹರಿಯಬಹುದಾದ ಸಮಸ್ಯೆಗಳಿಗೆ ಪರಿಹಾರವನ್ನೂ ಸೂಚಿಸಲಾಗುವುದು ಎಂದರು.
ನಾಡಪ್ರಭು ಕೆಂಪೇಗೌಡರ ಜಯಂತಿ: ಜೂನ್ 27 ರಂದು ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯನ್ನು ಆಚರಿಸಲು ಸರ್ಕಾರ ಆದೇಶಸಿದ್ದು, ಅದರಂತೆ ತಾಲ್ಲೂಕು ಆಡಳಿತದ ವತಿಯಿಂದ ಶಾಸಕ ಎಂ.ಟಿ.ಕೃಷ್ಣಪ್ಪನವರ ಅಧ್ಯಕ್ಷತೆಯಲ್ಲಿ ಅದ್ದೂರಿಯಾಗಿ ಕೆಂಪೇಗೌಡ ಜಯಂತಿ ಆಚರಿಸಲು ತೀರ್ಮಾನಿಸಲಾಗಿದೆ. ಈಗಾಗಲೇ ಶಾಸಕರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಿ ಜಯಂತಿಯ ಬಗ್ಗೆ ರೂಪುರೇಷೆಗಳನ್ನು ಸಿದ್ದಪಡಿಸಲಾಗಿದೆ.
ಜೂನ್ 27ರಂದು ಬೆಳಿಗ್ಗೆ 7 ಗಂಟೆಗೆ ಯುವ ಸಮೂಹ ಬೈಕ್ ಜಾಥಾ ನಡೆಸಲಿದ್ದು, ಶಾಸಕರು ಚಾಲನೆ ನೀಡಲಿದ್ದಾರೆ. ನಂತರ ಬೆಳಿಗ್ಗೆ 10 ಗಂಟೆಗೆ ಎತ್ತಿನ ಗಾಡಿಯಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಕೆಂಪೇಗೌಡರ ಭಾವಚಿತ್ರವನ್ನು ಪಟ್ಟಣದ ಪ್ರವಾಸಿ ಮಂದಿರದಿಂದ ಸತ್ಯಗಣಪತಿ ಆಸ್ಥಾನ ಮಂಟಪದವರೆಗೆ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಗುವುದು. ಆ ನಂತರ ನಡೆಯುವ ವೇದಿಕೆಯಲ್ಲಿ ಕೆಂಪೇಗೌಡರ ಇತಿಹಾಸವನ್ನು ಮುಂದಿನ ಪೀಳಿಗೆಗೆ ತಿಳಿಸುವಂತಹ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ ಎಂದರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೆಂಪೇಗೌಡರ ಜಯಂತಿಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೋರಿದರು.