ಪರೀಕ್ಷಾ ಕೇಂದ್ರಗಳಿಗೆ ಸಾನಿಟೈಸರ್ ಮಾಡುವಂತೆ ಕಟ್ಟುನಿಟ್ಟಿನ ಆದೇಶ ಮಾಡಿದ– ಅಪರ ಜಿಲ್ಲಾಧಿಕಾರಿ 

ತುಮಕೂರು: ಜಿಲ್ಲೆಯಲ್ಲಿ ಜೂನ್ 9 ರಿಂದ 20ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಸಾನಿಟೈಸರ್ ಮಾಡಿ ಯಾವುದೇ ಲೋಪದೋಷಗಳಿಲ್ಲದಂತೆ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆ- 1 ಮತ್ತು 2 ರ ಪರೀಕ್ಷೆಯನ್ನು ಯಾಶಸ್ವಿಯಾಗಿ ನಡೆಸಿದಂತೆ ಈ ಪರೀಕ್ಷೆಯನ್ನೂ ಪಾರದರ್ಶಕವಾಗಿ ನಡೆಸಬೇಕು ಎಂದು ತಿಳಿಸಿದರು.

 

ಜಿಲ್ಲೆಯ ತುಮಕೂರು ತಾಲ್ಲೂಕಿನಲ್ಲಿ 4 ಹಾಗೂ ಉಳಿದೆಲ್ಲ ತಾಲೂಕುಗಳಲ್ಲಿ ತಲಾ 1 ರಂತೆ ಒಟ್ಟು 13 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಎಲ್ಲಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಈಗಾಗಲೇ ಸಿಸಿ ಕ್ಯಾಮರಾ ಅಳವಡಿಸಿದ್ದಲ್ಲಿ ಸುಸ್ಥಿತಿಯಲ್ಲಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಪ್ರಶ್ನೆಪತ್ರಿಕೆಗಳನ್ನು ಠೇವಣಿಸುವ ತುಮಕೂರು ಜಿಲ್ಲಾ ಖಜಾನೆ ಮತ್ತು ಮಧುಗಿರಿ ಉಪ ಖಜಾನೆಗಳಲ್ಲಿ ಸುಸ್ಥಿತಿಯಲ್ಲಿರುವ ಸಿಸಿ ಟಿವಿ ಕ್ಯಾಮೆರಾ ಹಾಗೂ ಬಯೋಮೆಟ್ರಿಕ್ ವ್ಯವಸ್ಥೆ ಕಲ್ಪಿಸಿ ಅವುಗಳ ನಿರ್ವಹಣೆ ಮಾಡಬೇಕು ಎಂದರಲ್ಲದೆ, ಪರೀಕ್ಷೆಗೆ ಸಂಬಂಧಿಸಿದ ಗೌಪ್ಯ ವಸ್ತುಗಳ ಸಾಗಾಣಿಕೆ ಮಾಡುವ ವಾಹನಗಳಿಗೆ ಜಿಪಿಎಸ್ ಉಪಕರಣ ಅಳವಡಿಸಬೇಕು. ಖಜಾನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ಲಕೋಟೆ ಸಾಗಿಸುವ ಕಾರ್ಯದಲ್ಲಿ ಗೊಂದಲ, ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ನಿಗಾ ವಹಿಸಬೇಕು. ನಿಗಧಿತ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆ ತಲುಪುವಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸಾಕಷ್ಟು ಗಾಳಿ, ಬೆಳಕು ಇರುವ ಕೊಠಡಿಗಳನ್ನು ಉಪಯೋಗಿಸಬೇಕು. ಉತ್ತಮ ರೀತಿಯ ಪೀಠೋಪಕರಣ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೌಲಭ್ಯ ಇರುವ ಬಗ್ಗೆ ಪರಿಶೀಲಿಸಬೇಕು ಎಂದು ಸೂಚಿಸಿದರು. ನಿಯೋಜಿಸಿರುವ ಮಾರ್ಗಾಧಿಕಾರಿಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೋಲೀಸ್ ಬಂದೋಬಸ್ತ್ ಒದಗಿಸಬೇಕೆಂದು ಪೋಲೀಸ್ ಇಲಾಖೆಗೆ ಸೂಚಿಸಿದರು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಕ್ರಮವನ್ನು ತಡೆಯಲು ಮುಖ್ಯ ಅಧೀಕ್ಷಕರನ್ನು ಹಾಗೂ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಸಹಾಯಕರನ್ನು ನೇಮಿಸಲು ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕರಿಗೆ ನಿರ್ದೇಶನ ನೀಡಿದರು.

ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕ ಬಾಲ ಗುರುಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 9436 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-3 ಬರೆಯಲು ನೋಂದಾಯಿಸಿಕೊಂಡಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.

 

ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ಉಮಾ, ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ಡಿಡಿಪಿಐ ಮನಮೋಹನ್, ಕೊರಟಗೆರೆ ತಾಲ್ಲೂಕು ತಹಶೀಲ್ದಾರ್ ಮಂಜುನಾಥ್, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಮತ್ತಿತರ ಅಧಿಕಾರಿಗಳು ಹಾಜರಿದ್ದರು.

 

ಪರೀಕ್ಷಾ ವೇಳಾಪಟ್ಟಿ :
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ವೇಳಾಪಟ್ಟಿಯನ್ವಯ ಜೂನ್ 9ರಂದು ಕನ್ನಡ ಮತ್ತು ಅರೇಬಿಕ್; ಜೂನ್ 10ರಂದು ಇತಿಹಾಸ, ಭೌತಶಾಸ್ತ್ರ; ಜೂನ್ 11ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ಜೀವಶಾಸ್ತ್ರ; ಜೂನ್ 12ರಂದು ರಸಾಯನಶಾಸ್ತ್ರ, ಅರ್ಥಶಾಸ್ತ್ರ; ಜೂನ್ 13ರಂದು ಇಂಗ್ಲೀμï; ಜೂನ್ 14ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ, ಗೃಹವಿಜ್ಞಾನ; ಜೂನ್ 16ರಂದು ಸಮಾಜಶಾಸ್ತ್ರ, ಭೂಗರ್ಭಶಾಸ್ತ್ರ, ವಿದ್ಯುನ್ಮಾನಶಾಸ್ತ್ರ ಹಾಗೂ ಗಣಕ ವಿಜ್ಞಾನ; ಜೂನ್ 17ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ; ಜೂನ್ 18ರಂದು ಹಿಂದಿ; ಜೂನ್ 19ರಂದು ಮನಃಶಾಸ್ತ್ರ, ಮೂಲಗಣಿತ, ಭೂಗೋಳ ಶಾಸ್ತ್ರ; ಜೂನ್ 20ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕøತ, ಫ್ರೆಂಚ್, ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‍ನೆಸ್ ಪರೀಕ್ಷೆ ನಡೆಯಲಿದೆ.

 

 

ಪರೀಕ್ಷಾ ಕೇಂದ್ರ ವಿವರ:-
ತುಮಕೂರಿನ ಬಿಹೆಚ್ ರಸ್ತೆ ಸಿದ್ಧಗಂಗಾ ಬಾಲಕರ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು; ಪಿಬಿ ರಸ್ತೆಯ ಶ್ರೀ ಸಿದ್ಧಗಂಗಾ ಪದವಿ ಪೂರ್ವ ಕಾಲೇಜು, ಸರ್ಕಾರಿ ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜು; ಶಿರಾ ತಾಲೂಕಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು; ಕುಣಿಗಲ್ ತಾಲೂಕಿನ ಎಂ.ಜಿ.ಎಂ. ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ತುಮಕೂರು, ಮಧುಗಿರಿ, ತುರುವೇಕೆರೆ, ಕೊರಟಗೆರೆ, ಪಾವಗಡ, ಗುಬ್ಬಿ, ಚಿಕ್ಕನಾಯಕನಹಳ್ಳಿ ತಾಲೂಕುಗಳ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದೆ.

Leave a Reply

Your email address will not be published. Required fields are marked *

error: Content is protected !!