ತುಮಕೂರು: ರಾಜ್ಯದಲ್ಲಿ 7483 ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‍ಗಳನ್ನು ಪತ್ತೆಹಚ್ಚಿ ಅವರಿಗೆ ಗುರುತಿನಚೀಟಿಯನ್ನು ವಿತರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಚಂದ್ರಕಲಾ ತಿಳಿಸಿದರು.
ನಗರದ ಬಾಲ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ನಗರಾಭಿವೃದ್ಧಿ ಕೋಶ, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಗುರುವಾರ ನಡೆದ “ಗುರುತಿಸಲ್ಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಮಾಹಿತಿ ಸಂಗ್ರಹಣೆ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ”ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಫಾಯಿ ಕರ್ಮಚಾರಿಗಳು ಮಲ ಹೊರುವಂತಹ ಅಮಾನವೀಯ ಕೆಲಸವನ್ನು ಬಿಟ್ಟು ಗೌರವಪೂರ್ವಕವಾಗಿ ಬದುಕನ್ನು ಕಟ್ಟಿಕೊಳ್ಳಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸಫಾಯಿ ಕರ್ಮಚಾರಿಗಳಿಗೆ ಪೂರ್ಣ ಪ್ರಮಾಣದ ಪುನರ್ವಸತಿ ಕಲ್ಪಿಸಲು ಆಯೋಗ ಬದ್ಧವಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಕಾರ್ಯದಲ್ಲಿ ತೊಡಗಿಕೊಂಡಿರುವಾಗ 95 ಮಂದಿ ಮೃತಪಟ್ಟ ಬಗ್ಗೆ ವರದಿಯಾಗಿದ್ದು, ಮೃತಪಟ್ಟವರ ಕುಟುಂಬಕ್ಕೆ ಪಿಂಚಣಿ ನೀಡಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಜಿಲ್ಲೆಯಲ್ಲಿ 157 ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳನ್ನು ಗುರುತಿಸಲಾಗಿದ್ದು, ಗುರುತಿಸಲ್ಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳಿಗೆ ಸರ್ಕಾರದ ವಿವಿಧ ಯೋಜನೆ ಹಾಗೂ ಸವಲತ್ತುಗಳನ್ನು ಒದಗಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸಫಾಯಿ ಕರ್ಮಚಾರಿಗಳು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿಸಿ ಉನ್ನತ ಸ್ಥಾನವನ್ನು ತಲುಪುವಂತೆ ಮಾಡಬೇಕು. ರಾಜ್ಯದಲ್ಲಿಯೇ ಮೊಟ್ಟಮೊದಲ ಕಾರ್ಯಕ್ರಮ ಇದಾಗಿದ್ದು, ಸಫಾಯಿ ಕರ್ಮಚಾರಿಗಳು ಈ ವೇದಿಕೆ ಮೂಲಕ ಇಟ್ಟಿರುವ ಬೇಡಿಕೆಗಳಿಗೆ ಅಧಿಕಾರಿಗಳು ಸ್ಪಂದಿಸಿ ಪೂರೈಸಿದಾಗ ಮಾತ್ರ ಕಾರ್ಯಕ್ರಮದ ಉದ್ದೇಶ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.
ಗುರುತಿಸಲ್ಪಟ್ಟ ಸಫಾಯಿ ಕರ್ಮಚಾರಿಗಳಿಗೆ ಆದ್ಯತೆ ಮೇರೆಗೆ ವಸತಿ/ನಿವೇಶನ ಕಲ್ಪಿಸಲು ಜಿಲ್ಲೆಯಲ್ಲಿ ಸುಮಾರು 1500 ಎಕರೆ ಪ್ರದೇಶವನ್ನು ಗ್ರಾಮ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡಲಾಗಿದೆ ಎಂದು ತಿಳಿಸಿದರಲ್ಲದೆ, ಸಫಾಯಿ ಕರ್ಮಚಾರಿಗಳು ಮಲ ಹೊರುವ ಕಾಯಕವನ್ನು ಬಿಟ್ಟು ಬೇರೆ ಕೆಲಸ ಮಾಡುವ ಮನಸ್ಸು ಮಾಡಬೇಕು. ಇಂತಹವರಿಗೆ ಬ್ಯಾಂಕುಗಳಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಸಲ್ಲಿಸಿರುವ ಸಾಲದ ಅರ್ಜಿಗಳನ್ನು ವಿಳಂಬ ಮಾಡದೆ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸಫಾಯಿ ಕರ್ಮಚಾರಿಗಳಿಗಾಗಿ ವಿವಿಧ ಕೌಶಲ್ಯಾಭಿüವೃದ್ಧಿ ತರಬೇತಿಗಳನ್ನು ನೀಡಲಾಗುತ್ತಿದ್ದು, ಫಲಾನುಭವಿಗಳು ತರಬೇತಿ ಸೌಲಭ್ಯದ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.
ಮಹಾನಗರ ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಜನವರಿ ಮಾಹೆಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ಸಮೀಕ್ಷೆ ನಡೆಸಿದ್ದು, ಸಮೀಕ್ಷೆಯಲ್ಲಿ ಸ್ಕ್ಯಾವೆಂಜರ್‍ಗಳ ನಿಖರ ಮಾಹಿತಿ ಸಂಗ್ರಹಿಸಲು ಸಾಧ್ಯವಾಗದ ಕಾರಣ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ಮಾಹಿತಿ ಪಡೆಯಲು ಹಾಗೂ ಅವರ ಜೀವನ ಮಟ್ಟವನ್ನು ತಿಳಿದುಕೊಳ್ಳಲು ಈ ಕಾರ್ಯಕ್ರಮ ಸಹಕಾರಿಯಾಗಲಿದೆ. ಇದರಿಂದ ಅವರ ಬೇಡಿಕೆಗಳನ್ನು ಈಡೇರಿಸಲು ಹಾಗೂ ಪುನರ್ವಸತಿ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಮಾತನಾಡಿ, ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ಕಷ್ಟ ಕೊನೆಗಾಣಬೇಕು. ಉತ್ತಮ ಭವಿಷ್ಯ ರೂಪಿಸಲು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿಸುವುದು ಪೋಷಕರ ಜವಾಬ್ದಾರಿಯಾಗಿರುತ್ತದೆ. ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಮಕ್ಕಳ ಭವಿಷ್ಯವನ್ನು ರೂಪಿಸಬೇಕೆಂದರು.
ಸಫಾಯಿ ಕರ್ಮಚಾರಿ ಫಲಾನುಭವಿಗಳು ವಸತಿ ಶಾಲೆ ಪ್ರವೇಶಕ್ಕಾಗಿ 6, ಸಾಲ ಸೌಲಭ್ಯಕ್ಕಾಗಿ 63, ನಗರ ಪ್ರದೇಶದಲ್ಲಿ ವಸತಿ ಸೌಲಭ್ಯಕ್ಕಾಗಿ 7, ನಿವೇಶನ ಕೋರಿ 29, ತರಬೇತಿ ಬಯಸಿ 17, ಸಾಮಾಜಿಕ ಭದ್ರತೆ ಪಿಂಚಣಿಗಾಗಿ 3, ಆಯುಷ್ಮಾನ್ ಕಾರ್ಡ್‍ಗಾಗಿ 80 ಅರ್ಜಿಗಳನ್ನು ಕಾರ್ಯಕ್ರಮದಲ್ಲಿ ಸ್ವೀಕರಿಸಲಾಗಿದ್ದು, ಸ್ವೀಕೃತ ಮನವಿಗಳಿಗೆ ಜಿಲ್ಲಾಡಳಿತ ಸ್ಪಂದಿಸಿ ಶೀಘ್ರವೇ ಕ್ರಮಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.
ಸಫಾಯಿ ಕರ್ಮಚಾರಿಗಳ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಮಾತನಾಡಿ, ಸಫಾಯಿ ಕರ್ಮಚಾರಿಗಳು ಮಲ ಹೊರುವ ವೃತ್ತಿಯನ್ನು ಬದಲಾಯಿಸಿಕೊಳ್ಳುವ ಮನಸ್ಸು ಮಾಡಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‍ನಲ್ಲಿ ತೊಡಗಿಕೊಂಡಾಗ ಕಡ್ಡಾಯವಾಗಿ ಮುಖಗವಸು, ಕೈಗವಸು, ಗಮ್‍ಬೂಟ್‍ಗಳನ್ನು ಧರಿಸಬೇಕು ಎಂದು ಸಲಹೆ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಓಬಳೇಶ್ ಮಾತನಾಡಿ, ರಾಜ್ಯ ಸರ್ಕಾರವು ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ಸಮೀಕ್ಷೆಯಲ್ಲಿ 4,556 ಫಲಾನುಭವಿಗಳನ್ನು ಗುರುತಿಸಿದ್ದು, ಗುರುತಿಸಲ್ಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳಿಗೆ ಆರ್ಥಿಕ ಸೌಲಭ್ಯ, ಆರೋಗ್ಯ, ಶಿಕ್ಷಣ ನೀಡಿದಾಗ ಮಾತ್ರ ಅವರು ತಮ್ಮ ವೃತ್ತಿಯಿಂದ ಮುಕ್ತಿಹೊಂದಿ ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯವಾಗುತ್ತದೆ. ಸರ್ಕಾರ ಈ ನಿಟ್ಟಿನಲ್ಲಿ ಕ್ರಮವಹಿಸಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ಎನ್.ನಾರಾಯಣಸ್ವಾಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಯೋಗಾನಂದ, ಸಫಾಯಿ ಕರ್ಮಚಾರಿ ಆಯೋಗದ ಸಂಶೋಧನಾಧಿಕಾರಿ ಮಾದೇವಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಕಾನೂನು ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಚಂದ್ರಶೇಖರ್, ಜಿಲ್ಲಾ ಸಫಾಯಿ ಕರ್ಮಚಾರಿಗಳ ಜಾಗೃತಿ ಸಮಿತಿ ಉಸ್ತುವಾರಿ ಸದಸ್ಯರಾದ ರಾಮಮೂರ್ತಿ, ರಂಗಸ್ವಾಮಿ, ನಾಗರಾಜು, ಸಾಗರ್, ಮತ್ತಿತರರು ಹಾಜರಿದ್ದರು.